PGK NEWS:-ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಜಮೆ: ಮೋದಿ ಭರವಸೆ ಬಗ್ಗೆ ಸದನದಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ಗಂಭೀರ ಜಟಾಪಟಿ.


 PGK NEWS:-ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೂ 15 ಲಕ್ಷ ರೂಪಾಯಿ ಜಮಾ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ವಿಧಾನಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಮೋದಿ ಭರವಸೆ ಬಗ್ಗೆ ಪುರಾವೆ ನೀಡುವಂತೆ ಆಡಳಿತಾರೂಢ ಬಿಜೆಪಿ ಒತ್ತಾಯಿಸಿದೆ.

ಇಂದು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಶಾಸಕ ಕೋನರೆಡ್ಡಿ ಅವರು, ಅವರು(ಬಿಜೆಪಿ) ನಮ್ಮ (ಕಾಂಗ್ರೆಸ್) ಖಾತರಿ ಯೋಜನೆಗಳನ್ನು ಟೀಕಿಸುತ್ತಿದ್ದಾರೆ. ನಮ್ಮ ಸರ್ಕಾರ ಅದನ್ನು ಈಡೇರಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದರಿಂದ ನಮ್ಮ ಭರವಸೆಗಳಿಗೆ ನಾವು ಬದ್ಧರಾಗಿದ್ದೇವೆ. ಆದರೆ ನೀವು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ.ಗಳನ್ನು ಜಮಾ ಮಾಡುವ ಭರವಸೆ ನೀಡಿದ್ದೀರಿ. ಆದರೆ ಒಂದೇ ಒಂದು ಬ್ಯಾಂಕ್ ಖಾತೆಗೂ ಹಣ ಜಮೆ ಮಾಡಿಲ್ಲ ಎಂದರು.

ನೀವು ಯುವಕರಿಗೆ 2 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದೀರಿ, ಆದರೆ ಅದನ್ನು ಈಡೇರಿಸಲು ನಿಮ್ಮಿಂದ ಸಾಧ್ಯವಾಗಲಿಲ್ಲ. ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆ ನೀಡಿದ್ದೀರಿ ಎಂದು ಕೋನರೆಡ್ಡಿ ಹೇಳಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್, ಪ್ರತಿ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ ಎಂಬುದಕ್ಕೆ ಕನಿಷ್ಠ ಒಂದು ಸಾಕ್ಷ್ಯ ಅಥವಾ ವಿಡಿಯೋ ತುಣುಕನ್ನಾದರು ನೀಡುವಂತೆ ಕೋನರೆಡ್ಡಿ ಅವರಿಗೆ ಒತ್ತಾಯಿಸಿದರು.

ಅವರು(ಕೋನರೆಡ್ಡಿ) ಏಕೆ ಬೋಗಸ್ ಮತ್ತು ಸುಳ್ಳು ವಿಷಯಗಳನ್ನು ಮಾತನಾಡುತ್ತಿದ್ದಾರೆ? ಕೆಲವು ಶ್ರೀಮಂತರು ಮತ್ತು ರಾಜಕಾರಣಿಗಳು ಈ ದೇಶವನ್ನು ಲೂಟಿ ಮಾಡುವ ಮೂಲಕ ವಿದೇಶಿ ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಇಟ್ಟಿರುವ ಕಪ್ಪುಹಣದ ಬಗ್ಗೆ ಮತ್ತು ಅವುಗಳನ್ನು ಮರಳಿ ಪಡೆಯುವ ಬಗ್ಗೆ ಆಗ ಪ್ರಧಾನಿ ಮಾತನಾಡಿದ್ದರು. ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ಜಮಾ ಮಾಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ ಭಾಷಣದ ಕನಿಷ್ಠ ಒಂದು ವಿಡಿಯೋ ಕ್ಲಿಪ್ಪಿಂಗ್ ಅನ್ನು ತೋರಿಸಲಿ. ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಯತ್ನಾಳ್ ಸವಾಲು ಹಾಕಿದರು.

ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ಯಾರೂ ನೀಡಬಾರದು, ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ಜಮೆ ಮಾಡುವ ಬಗ್ಗೆ ಪ್ರಧಾನಿ ಎಂದಿಗೂ ಮಾತನಾಡಿಲ್ಲ. ಆದರೆ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ವಿರುದ್ಧ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಸುಳ್ಳುಗಳನ್ನು ಹರಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇದು ಆಡಳಿತ ಪಕ್ಷದ ಸದಸ್ಯರು ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.

2014ರ ಸಾರ್ವತ್ರಿಕ ಚುನಾವಣೆಯ ಪೂರ್ವದಲ್ಲಿ, ಬಿಜೆಪಿ ಮತ್ತು ಮೋದಿ ಭ್ರಷ್ಟರು ವಿದೇಶಿ ಬ್ಯಾಂಕ್ ಖಾತೆಗಳಲ್ಲಿ ಇಟ್ಟಿರುವ ಕಪ್ಪು ಹಣವನ್ನು ಮರಳಿ ತರುವುದಾಗಿ ಹೇಳಿದ್ದರು. ಈ ಬಗ್ಗೆ ಬಿಸಿಬಿಸಿ ಚರ್ಚೆ ಮುಂದುವರಿದಾಗ ಸ್ಪೀಕರ್ ಯುಟಿ ಖಾದರ್ ಎರಡೂ ಕಡೆಯ ಶಾಸಕರನ್ನು ಸಮಾಧಾನ ಪಡಿಸಲು ಯತ್ನಿಸಿದರು.

ಬಿಜೆಪಿಯನ್ನು ಪ್ರಶ್ನಿಸಿದ ಇಂಧನ ಸಚಿವ ಕೆ ಜೆ ಜಾರ್ಜ್, ಸ್ವಿಸ್ ಬ್ಯಾಂಕ್‌ನಿಂದ ಕಪ್ಪು ಹಣ ತರುವುದಾಗಿ ಪ್ರಧಾನಿ ಭರವಸೆ ನೀಡಿದ್ದರು. ಹಣ ಬಂದಿದೆಯೇ? ಇದಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್, ಕಪ್ಪುಹಣ ತರುವ ಬಗ್ಗೆ ಮಾತನಾಡಿದ್ದ ಪ್ರಧಾನಿ, ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ಜಮಾ ಮಾಡುವುದಾಗಿ ಎಂದಾದರೂ ಹೇಳಿದ್ದರಾ? ಎಂದು ಪ್ರಶ್ನಿಸಿದರು.

ಯತ್ನಾಳ್ ಗೆ ಸಾಥ್ನ ನೀಡಿದ ಬಿ ವೈ ವಿಜಯೇಂದ್ರ ಅವರು ಸಹ, 15 ಲಕ್ಷ ರೂ.ಗಳನ್ನು ಬ್ಯಾಂಕ್‌ ಖಾತೆಗೆ ಜಮೆ ಮಾಡುವುದಾಗಿ ಪ್ರಧಾನಿ ಭರವಸೆ ನೀಡಿದ್ದನ್ನು ಸಾಕ್ಷಿ ಸಮೇತ ಸಾಬೀತುಪಡಿಸಬೇಕು, ಇಲ್ಲವೇ ಅವರ ಹೇಳಿಕೆಯನ್ನು ಸಭಾಪತಿ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಸಚಿವ ಕೆ.ಎನ್.ರಾಜಣ್ಣ ಮತ್ತು ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ಮಾತನಾಡಿ, ಪ್ರಧಾನಿಯವರು ಇಂತಹ ಭರವಸೆ ನೀಡಿದ್ದು, ಅದನ್ನು ಈಡೇರಿಸಿಲ್ಲ ಎಂಬುದು ಇಡೀ ದೇಶಕ್ಕೆ ಗೊತ್ತಿದೆ ಎಂದರು.

ಪ್ರಧಾನಿ ಇಂತಹ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಪದೇ ಪದೇ ಪ್ರತಿಪಾದಿಸುತ್ತಿದ್ದರೂ, ಬಿಜೆಪಿ ಸದಸ್ಯರು ಸಾಕ್ಷ್ಯಕ್ಕಾಗಿ ಒತ್ತಾಯಿಸುವುದನ್ನು ಮುಂದುವರಿಸಿದ್ದರಿಂದ ವಿಧಾನಸಭೆಯಲ್ಲಿ ಕೆಲಕಾಲ ಕೋಲಾಹಲ ಸೃಷ್ಟಿಯಾಯಿತು.






PGK

Post a Comment

Previous Post Next Post