PGK NEWS:-ದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶಿಕ್ಷೆಗೆ ತಡೆ ಕೋರಿ ಶನಿವಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಕಳೆದ ಮಾರ್ಚ್‌ನಲ್ಲಿ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್, ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿ, ಐಪಿಸಿ 499,500 ರಡಿ ಎರಡು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಶಿಕ್ಷೆ ಪ್ರಕಟಗೊಂಡ ಮರುದಿನವೇ, ಲೋಕಸಭೆಯ ಸ್ಪೀಕರ್ ಕಾರ್ಯಾಲಯ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿತ್ತು.
ರಾ, ಗಾಂಧಿ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ಕಳೆದ ಶುಕ್ರವಾರ ನಿರಾಕರಿಸಿತ್ತು. ಇಂದು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
2019ರ ಲೋಕಸಭೆ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರು, ಮೋದಿ ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.
ರಾಹುಲ್ ಹೇಳಿಕೆಯಿಂದ ಆಕ್ರೋಶಗೊಂಡ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ, ದೂರು ದಾಖಲು ಮಾಡಿದ್ದರು. 2019ರ ಏಪ್ರಿಲ್ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು.