ಪಶ್ಚಿಮಘಟ್ಟ ವಾಯ್ಸ್ ) ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳಿಗೆ ಹೆಚ್ಚು ಬೇಡಿಕೆಯಿದ್ದು, ದಾವಣಗೆರೆ ನಗರದ ಹಲವು ಕಡೆ ಸೂಕ್ತ ಜಾಗ ಗುರುತಿಸಿ ಹಾಸ್ಟೆಲ್ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ತಿಳಿಸಿದರು.
ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಕುಂದುವಾಡ ರಸ್ತೆಯ ಸಪ್ತಗಿರಿ ಶಾಲೆಯ ಪಕ್ಕದಲ್ಲಿ ಜರುಗಿದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ನೂತನ ಕಟ್ಟಡಕ್ಕೆ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.
ನಗರದಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಕಟ್ಟಡವು 3.26 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದ್ದು, ಗುಣಮಟ್ಟದ ಕಾಮಗಾರಿ ಹಾಗೂ ವ್ಯವಸ್ಥಿತ ಕೊಠಡಿಗಳನ್ನು ಹೊಂದಿರಬೇಕು. ನಿಗದಿತ ಅವಧಿಯಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಂಡು ವಿದ್ಯಾರ್ಥಿನಿಯರ ಅನುಕೂಲಕ್ಕೆ ಲಭ್ಯವಾಗಬೇಕು. ಕಟ್ಟಡವನ್ನು ಅತ್ಯಂತ ವ್ಯವಸ್ಥಿತವಾಗಿ ನಿರ್ಮಾಣ ಮಾಡಬೇಕು” ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಅಧಿಕಾರಿಗಳು ಪ್ರತಿಯೊಬ್ಬರಿಗೂ ಹಾಸ್ಟೆಲ್ ವ್ಯವಸ್ಥೆ ಮಾಡಿಕೊಡಬೇಕು ಹಾಗೂ ವಿದ್ಯಾರ್ಥಿನಿಯರು ಹಾಸ್ಟೆಲ್ ಸೌಲಭ್ಯದ ಜೊತೆಗೆ ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ಹುದ್ದೆಗೇರಬೇಕು” ಎಂದರು.
ದಾವಣಗೆರೆ ತಾಲೂಕು ವ್ಯಾಪ್ತಿಯಲ್ಲಿ ಸರ್ಕಾರಿ ಒಡೆತನದ ಜಾಗ ಕಡಿಮೆ ಇದ್ದು, ಖಾಸಗಿ ಜಾಗವನ್ನು ಖರೀದಿಸಿ, ವಸತಿ ನಿಲಯ ನಿರ್ಮಾಣ ಮಾಡಲಾಗುವುದು” ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗಾಯಿತ್ರಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪುಷ್ಪ ಎಸ್ ಗಡ್ಡಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುದೀಪ್ ಪಿ. ಬನಾರೆ, ಸಹಾಯಕ ಎಂಜಿನಿಯರ್ ಪ್ರಿಯಾ ಕೆ ಎ ಇದ್ದರು.
ವರದಿ:- ಶಿರಾಜ್ ಖಾನ್ ದಾವಣಗೆರೆ