ಪಶ್ಚಿಮಘಟ್ಟ ವಾಯ್ಸ್ ಕಾರವಾರ : ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಕೆಲಸಗಳಲ್ಲಿ ಕರ್ತವ್ಯ ಲೋಪ ಮತ್ತು ದುರ್ನಡತೆ ತೋರಿದಲ್ಲಿ ಅಂತಹವರ ವಿರುದ್ದ ಲೋಕಾಯಕ್ತ ಸಂಸ್ಥೆಯು ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಎಚ್ಚರಿಕೆ ನೀಡಿದರು.
ಅವರು ಶನಿವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ, ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸರ್ಕಾರಿ ಕಚೇರಿಗಳಿಗೆ ಸಲ್ಲಿಸಿದಾಗ ಅವುಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು, ತಮ್ಮ ಕಚೇರಿ ವ್ಯಾಪ್ತಿಗೆ ಒಳಪಡದ ಅರ್ಜಿಯಾಗಿದ್ದಲ್ಲಿ ಅದನ್ನು ಸಂಬಂಧಪಟ್ಟ ಇಲಾಖೆಗೆ ವರ್ಗಾಯಿಸಿ ಈ ಬಗ್ಗೆ ಅರ್ಜಿದಾರರಿಗೆ ಸೂಕ್ತ ಹಿಂಬರಹ ನೀಡಬೇಕು. ಕಾನೂನು ವ್ಯಾಪ್ತಿಯಲ್ಲಿ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.
ಸರ್ಕಾರಿ ನೌಕರರು ಭ್ರಷ್ಠಾಚಾರದಲ್ಲಿ ತೊಡಗಿಕೊಳ್ಳುವುದು, ಸ್ವಜನ ಪಕ್ಷಪಾತ, ದುರ್ನಡತೆ ,ಅಶಿಸ್ತು, ಕಳಪೆ ಕಾಮಗಾರಿಗಳು, ಮತ್ತು ದುರುದ್ದೇಶ ಪೀಡಿತ ಕರ್ತವ್ಯ ಲೋಪದಲ್ಲಿ ತೊಡಗಿದ್ದಲ್ಲಿ ಅಂತಹವರ ವಿರುದ್ದ ಲೋಕಾಯುಕ್ತ ಕಾಯ್ದೆಯಡಿಯಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಸರ್ಕಾರಿ ನೌಕರಿಗೆ ಸಾರ್ವಜನಿಕರ ಸೇವೆ ಮಾಡಲು ದೊರೆತಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಾರ್ವಜನಿಕರಿಗೆ ಪ್ರಾಮಾಣಿಕ ರೀತಿಯಲ್ಲಿ ಉತ್ತಮ ಸೇವೆ ಒದಗಿಸಿ ಅವರಿಗೆ ನಿಮ್ಮ ಬಗ್ಗೆ ಸದಾಭಿಪ್ರಾಯ ಮೂಡುವಂತೆ ಮಾಡಿ, ಕಿರಿಯ ಅಧಿಕಾರಿಗಳು ತಪ್ಪು ಮಾಡಿದಲ್ಲಿ ಹಿರಿಯ ಅಧಿಕಾರಿಗಳು ಅದನ್ನು ಸರಿಪಡಿಸಬೇಕು. ಸಾರ್ವಜನಿಕ ಆಸ್ತಿ ರಕ್ಷಣೆ ನೌಕರರ ಪ್ರಥಮಾದ್ಯತೆಯಾಗಬೇಕು ಎಂದರು
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಲೋಕಾಯುಕ್ತ ಉಪ ನಿಬಂಧಕರಾದ ರಾಜಶೇಖರ್, ಚನ್ನಕೇಶವ ರೆಡ್ಡಿ, ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಪಾಟೀಲ್, ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಉಪಸ್ಥಿತರಿದ್ದರು.
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು.