ನವದೆಹಲಿ: ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ನ್ಯಾಯಾಂಗ ಕರ್ತವ್ಯ ನಿರ್ವಹಿಸದಂತೆ ದೆಹಲಿ ಹೈಕೋರ್ಟ್ ಆದೇಶ ನೀಡಿದೆ. ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನ್ಯಾಯಾಂಗ ಕೆಲಸವನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಳ್ಳಲಾಗುತ್ತದೆ ಎಂದ ನೋಟಿಸ್‌ನಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಆದಾಗ್ಯೂ, ಈ ನಿರ್ಧಾರವನ್ನು ಏಕೆ ತೆಗೆದುಕೊಳ್ಳಲಾಗಿದೆ ಎಂಬುದು ಈ ಸೂಚನೆಯಲ್ಲಿ ಸ್ಪಷ್ಟವಾಗಿಲ್ಲ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (CJI) ಸಂಜೀವ್ ಖನ್ನಾ ಅವರ ನಿರ್ದೇಶನದ ನಂತರ ದೆಹಲಿ ಹೈಕೋರ್ ಮುಖ್ಯ ನ್ಯಾಯಮೂರ್ತಿ (ಸಿಜೆ) ದೇವೇಂದ್ರ ಕುಮಾರ್ ಉಪಾಧ್ಯಾಯ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ವಾಸ್ತವವಾಗಿ, ಸಂಜೀವ್ ಖನ್ನಾ ಅವರು ಈ ಘಟನೆ ಸಂಬಂಧ ಒಂದು ನಿರ್ಧಾರ ತೆಗೆದುಕೊಳ್ಳುವವರೆಗೂ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ಯಾವುದೇ ನ್ಯಾಯಾಂಗ ಕೆಲಸವನ್ನು ನಿಯೋಜಿಸಬೇಡಿ ಎಂದು ದೆಹಲಿ ಹೈಕೋರ್ಟ್‌ಗೆ ನಿರ್ದೇಶನ ನೀಡಿದ್ದರು.
ವಿಷಯದ ಗಂಭೀರತೆಯನ್ನು ಪರಿಗಣಿಸಿ ಸಂಜೀವ್ ಖನ್ನಾ ಅವರು ಶನಿವಾರ ಮೂವರು ಸದಸ್ಯರ ಆಂತರಿಕ ತನಿಖಾ ಸಮಿತಿಯನ್ನು ರಚಿಸಿದರು. ಸಮಿತಿಯಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶೆ ಅನು ಶಿವರಾಮನ್ ಇದ್ದಾರೆ.
ನ್ಯಾಯಮೂರ್ತಿ ಯಶವಂತ್ ವರ್ಮಾ ತಮ್ಮ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸಿದ್ದು ಈ ಹಣವು ತಮಗೆ ಅಥವಾ ತಮ್ಮ ಕುಟುಂಬದ ಸದಸ್ಯರಿಗೆ ಸೇರಿಲ್ಲ ಎಂದು ಹೇಳಿದ್ದರು.