ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್: ಉತ್ತರ ಕನ್ನಡ/ದಾಂಡೇಲi ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳಿಂದ ಆಗಾಗ ಆಕ್ಷೇಪ ವ್ಯಕ್ತವಾಗುತ್ತಲೇ ಇದೆ. ಇದೀಗ ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಆರ್ವಿ ದೇಶಪಾಂಡೆ ಕೂಡ ಉಚಿತ ಯೋಜನೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಉಚಿತ ಕೊಡುಗೆ ಎಂಬುದು ಅಪಾಯಕಾರಿ ಎಂದು ಅವರು ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲi ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಉದ್ಘಾನಾ ಸಮಾರಂಭದಲ್ಲಿ ಮಾತನಾಡಿದ ಅವರು, ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಮತ್ತು ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು ಎಂದು ಆರ್ವಿ ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ.
ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆನಂದಿಸುತ್ತಿದ್ದಾರೆ. ಈ ಯೋಜನೆಯನ್ನು ಪುರುಷರಿಗೂ ವಿಸ್ತರಿಸಬೇಕೆಂಬ ಬೇಡಿಕೆ ಇತ್ತು. ಎಲ್ಲವನ್ನೂ ಉಚಿತವಾಗಿ ನೀಡಿದರೆ ನಾವು ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.